ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ಕಿರುಕುಳ ನೀಡುವುದನ್ನು ತಡೆಯಲು ಸರ್ಕಾರ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರೂಪಿಸಲು ಮುಂದಾಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ ರಾಜಭವನದಲ್ಲಿ ಇಂದು ಆಯೋಜಿಸಿದ್ದ ಚಹಾಕೂಟದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು.

ಈ ವೇಳೆ, ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಅಥವಾ ಲೇವಾದೇವಿಗಾರರಿಂದ ತೊಂದರೆಗಳನ್ನು ಎದುರಿಸುವವರು ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳವನ್ನು ಕೊನೆಗೊಳಿಸಲು ಮತ್ತು ಸಾಲಗಾರರ ಹಿತರಕ್ಷಣೆಗೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ತರುವ ಚಿಂತನೆ ಸರ್ಕಾರ ನಡೆಸುತ್ತಿದೆ.

ನಿಯಮ ಮೀರಿದ ವ್ಯವಹಾರಗಳು ಮತ್ತು ಬಲವಂತದ ಸಾಲ ವಸೂಲಿಗೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧಾರ ಮಾಡಲಾಗಿದೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ತೊಂದರೆ ಅನುಭವಿಸುತ್ತಿರುವವರು ದೂರು ನೀಡಿದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.
ಈಗಿರುವ ಕಾನೂನನ್ನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಅವಕಾಶ ಕಲ್ಪಿಸಲಾಗುವುದು. ನೋಂದಣಿಯಿಲ್ಲದ ಲೇವಾದೇವಿಗಾರರ ಮೇಲೆ ನಿಯಂತ್ರಣ ಹೇರಲು ಹೊಸ ಕಾನೂನಿನಲ್ಲಿ ಅವಕಾಶ ನೀಡಲಾಗುವುದು. ಬೆದರಿಕೆ ಮತ್ತು ಬಲವಂತದ ಸಾಲ ವಸೂಲಾತಿ ಸಹಿಸಲಾಗದು. ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
